Oyorooms IN

Saturday, 22nd July, 2017 4:29 PM

BREAKING NEWS

ಕೋಲಾರ

ಅಕ್ರಮ ಸಕ್ರಮ ಯೋಜನೆ : ಅರ್ಹರಿಗೆ ಡಿಸೆಂಬರ್ ಒಳಗೆ ಹಕ್ಕುಪತ್ರ ನೀಡುವಂತೆ ಕಂದಾಯ ಸಚಿವರ ಸೂಚನೆ

kadaya sahivara sabehe

ಕೋಲಾರ : ಬಡಜನರಿಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಅಕ್ರಮ ಸಕ್ರಮ ಯೋಜನೆಯಡಿ ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡಿರುವವರನ್ನು ಸಮೀಕ್ಷೆ ನಡೆಸಿ ಗುರುತಿಸಿ ಹಕ್ಕು ಪತ್ರ ನೀಡುವಂತೆ ಕಂದಾಯ ಸಚಿವರಾದ ಶ್ರೀ ಕಾಗೋಡು ತಿಮ್ಮಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಇಂದು ಕೋಲಾರ ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮ ಲೆಕ್ಕಿಗರು, ಪಿ.ಡಿ.ಓ, ಕಂದಾಯ ನಿರೀಕ್ಷಕರು, ಗ್ರಾಮವಾರು, ಸರ್ವೇ ನಂಬರ್ ವಾರು ಮನೆ ನಿರ್ಮಾಣ ಮಾಡಿಕೊಂಡವರ ಪಟ್ಟಿ ಮಾಡಿ ಅದರಲ್ಲಿ ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಡಿಸೆಂಬರ್ ಒಳಗಾಗಿ ಹಕ್ಕು ಪತ್ರ ವಿತರಿಸುವಂತೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

94 ಸಿಸಿ ಅಡಿಯಲ್ಲಿ ಇದೇ ರೀತಿ ನಗರಸಭೆ/ಪುರಸಭೆ ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಸಿ ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಹಕ್ಕುಪತ್ರ ವಿತರಿಸುವಂತೆ ನಿರ್ದೇಶನ ನೀಡಿದರು.  ಮಾಲೂರು ತಾಲ್ಲೂಕು ಕಚೇರಿಯಲ್ಲಿ ಭೂ ದಾಖಲೆಗಳು ನಾಪತ್ತೆಯಾಗಿರುವ ಬಗ್ಗೆ ಮಾಲೂರು ಶಾಸಕ ಶ್ರೀ ಕೆ.ಎಸ್.ಮಂಜುನಾಥ ಗೌಡ ಅವರು ಸಚಿವರ ಗಮನ ಸೆಳೆದರು. ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ವರದಿ ನೀಡುವಂತೆ ಅವರು ಮಾಲೂರು ತಹಶೀಲ್ದಾರ್ ಅವರಿಗೆ ನಿರ್ದೇಶನ ನೀಡಿದರು.

ಕಳೆದ 4 ವರ್ಷಗಳಿಂದ ಸತತವಾಗಿ ಕೋಲಾರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳು ಬರಪೀಡಿತವಾಗಿರುವುದರಿಂದ ಕಂದಾಯ ಮನ್ನಾ ಮಾಡುವಂತೆ ಈ ಸಂದರ್ಭದಲ್ಲಿ ಸಚಿವರು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.  ಜಿಲ್ಲೆಯ ಬರಪರಿಸ್ಥಿತಿ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿಗಳು ಜುಲೈ ತಿಂಗಳವರೆಗೆ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ. 44.15 ರಷ್ಟು ಅಧಿಕ ಮಳೆಯಾಗಿದೆ ಆದರೆ ಆಗಸ್ಟ್ ತಿಂಗಳಲ್ಲಿ ವಾಡಿಕೆಯಂತೆ 87 ಮಿ.ಮೀ ಮಳೆಯಾಗಬೇಕಾಗಿದ್ದು ಆಗಸ್ಟ್ 24 ರವರೆಗೆ 6.78 ಮಿ.ಮೀಟರ್ ಮಳೆಯಾಗಿದೆ. ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 1.02 ಲಕ್ಷ ಹೆಕ್ಟೇರ್ ಬಿತ್ತನೆ ಗುರಿಯಿದ್ದು ಈವರೆಗೆ 74,962 ಹೆಕ್ಟೇರ್ ಅಂದರೆ ಶೇ.73.49 ರಷ್ಟು ಬಿತ್ತನೆ ಕಾರ್ಯ ಪೂರ್ಣಗೊಂಡಿದೆ. ಜಾನುವಾರುಗಳ ಮೇವಿಗೂ ಯಾವುದೇ ಕೊರತೆ ಇರುವುದಿಲ್ಲ ಎಂದು ಮಾಹಿತಿ ನೀಡಿದರು.

ಈ ಅಂಶಗಳನ್ನು ಗಮನಿಸಿದ ಸಚಿವರು ಆಗಸ್ಟ್ ತಿಂಗಳಲ್ಲಿ ಮಳೆ ಕೊರತೆಯಾಗಿರುವುದರಿಂದ ಇನ್ನು ಮುಂದೆಯೂ ಮಳೆ ಕಡಿಮೆಯಾದರೆ ರೈತರು ಪರ್ಯಾಯವಾಗಿ ಬೆಳೆಯಬೇಕಾದ ಫಸಲುಗಳ ಬಗ್ಗೆ ಎಲ್ಲಾ ಗ್ರಾಮಪಂಚಾಯಿತಿಗಳಲ್ಲಿ ಜಾಗೃತಿ ಮೂಡಿಸುವಂತೆ ಆದೇಶಿಸಿದರು.  ಕೋಲಾರ ಬರಪೀಡಿತ ಜಿಲ್ಲೆಯಾಗಿರುವುದರಿಂದ ಮಹಾತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ಗರಿಷ್ಠ ಮಟ್ಟದಲ್ಲಿ ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಉದ್ಯೋಗ ಖಾತ್ರಿ ಯೋಜನೆ ಜನರು ಹಕ್ಕು ಎಂಬ ಕುರಿತು ಅರಿವು ನೀಡುವಂತೆ ಸಲಹೆ ನೀಡಿದರು.

ಕೋಲಾರ ಜಿಲ್ಲೆಯಲ್ಲಿ ಬರಪರಿಸ್ಥಿತಿಯನ್ನು ಅಧಿಕಾರಿಗಳು ವ್ಯವಸ್ಥಿತವಾಗಿ ನಿರ್ವಹಿಸುತ್ತಿರುವ ಬಗ್ಗೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಕಂದಾಯ ಇಲಾಖೆ ಎಲ್ಲಾ ಇಲಾಖೆಗಳಿಗೆ ಮಾತೃ ಇಲಾಖೆಯಿದ್ದಂತೆ. ಭ್ರಷ್ಟಾಚಾರ ಮುಕ್ತ ಪಾರದರ್ಶಕ ಆಡಳಿತ ನೀಡುವುದು ಸರ್ಕಾರದ ಉದ್ದೇಶವಾಗಿದ್ದು ಈ ನಿಟ್ಟಿನಲ್ಲಿ ಈ ಕೆಲಸವು ಕಂದಾಯ ಇಲಾಖೆಯಿಂದಲೇ ಆರಂಭವಾಗಬೇಕು. ಆಗ ಮಾತ್ರ ಜನತೆಯಲ್ಲಿ ಇಲಾಖೆಯ ಬಗ್ಗೆ ವಿಶ್ವಾಸ ಮೂಡಲು ಸಾಧ್ಯ ಎಂದರು.

ವೈಜ್ಞಾನಿಕ ಯುಗದಲ್ಲಿ ತಂತ್ರಜ್ಞಾನದ ಬೆಳವಣಿಗೆಯು ಆಡಳಿತ ಸುಧಾರಣೆ ಮತ್ತು ಶುದ್ಧ ನಡವಳಿಕೆಗೆ ಪೂರಕವಾಗಿರಬೇಕು. ಕೋಲಾರ ಜಿಲ್ಲೆಯಲ್ಲಿ ಕಂದಾಯ ಅಧಿಕಾರಿಗಳು ಸರ್ಕಾರಿ ಮತ್ತು ಖಾಸಗಿ ಜಮೀನನ್ನು ಕರಾರುವಕ್ಕಾಗಿ ಗುರುತಿಸಿ ಸರ್ಕಾರಿ ಜಮೀನು ಒತ್ತುವರಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಒತ್ತುವರಿ ಕುರಿತು ಸದಾ ಜಾಗೃತರಾಗಿಬೇಕೆಂದು ಸೂಚನೆ ನೀಡಿದರು. ಈ ಹಿನ್ನಲೆಯಲ್ಲಿ ಗ್ರಾಮಲೆಕ್ಕಿಗರು ಕೇಂದ್ರ ಸ್ಥಾನದಲ್ಲಿಯೇ ವಾಸವಾಗಿರಬೇಕೆಂದು ಅವರು ಆದೇಶಿಸಿದರು.

ಸರ್ಕಾರದಿಂದ ವಿವಿಧ ಉದ್ದೇಶಗಳಿಗೆ ಗುತ್ತಿಗೆ ಆಧಾರದಲ್ಲಿ ಮಂಜೂರಾದ ಭೂಮಿಯು ನಿಗಧಿತ ಉದ್ದೇಶಕ್ಕೆ ಬಳಕೆಯಾಗುತ್ತಿದೆಯೇ ಇಲ್ಲವೇ ಎಂದು ಪರಿಶೀಲಿಸಿ ಇಲ್ಲವಾದಲ್ಲಿ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸಚಿವರು ತಿಳಿಸಿದರು.

ಜಿಲ್ಲೆಯಲ್ಲಿ ಇರುವ ಅರಣ್ಯ ಭೂಮಿ ಹಾಗೂ ಕಂದಾಯ ಭೂಮಿಯ ಸರ್ವೇ ಮಾಡಿ ಅರಣ್ಯ ಭೂಮಿಗೆ ಪ್ರತ್ಯೇಕ ಸಂಖ್ಯೆ ನೀಡಿ ಗೊಂದಲ ನಿವಾರಿಸುವಂತೆ ಸಚಿವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯ ಸರ್ಕಾರವು ಇತ್ತೀಚೆಗೆ ಆರಂಭಿಸಿರುವ ಪಂಚಾಯತ್ 100 ಬಾಪೂಜಿ ಸೇವಾ ಕೇಂದ್ರಗಳಲ್ಲಿ ನೀಡಲಾಗುವ 100 ಸೇವೆಗಳ ವಿವರಗಳ ಫಲಕಗಳನ್ನು ಅಳವಡಿಸುವಂತೆ ನಿರ್ದೇಶನ ನೀಡಿದರು.

ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ಸಭೆಯ ನಂತರ ಸಾರ್ವಜನಿಕರ ಮನವಿಗಳನ್ನು ಸ್ವೀಕರಿಸಿದರು.
ಸಭೆಯಲ್ಲಿ ಬಂಗಾರಪೇಟೆ ಶಾಸಕ ಶ್ರೀ ಎಸ್.ಎನ್.ನಾರಾಯಣಸ್ವಾಮಿ, ಮಾಲೂರು ಶಾಸಕ ಶ್ರೀ ಮಂಜುನಾಥ ಗೌಡ, ಕೆ.ಜಿ.ಎಫ್ ಶಾಸಕಿ ಶ್ರೀಮತಿ ವೈ.ರಾಮಕ್ಕ, ಜಿಲ್ಲಾಪಂಚಾಯತ್ ಅಧ್ಯಕ್ಷೆ ಶ್ರೀಮತಿ ಗೀತಮ್ಮ ಜಿ.ಆನಂದರೆಡ್ಡಿ, ಉಪಾಧ್ಯಕ್ಷೆ ಶ್ರೀಮತಿ ಯಶೋಧಮ್ಮ ಕೃಷ್ಣಮೂರ್ತಿ, ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ.ತ್ರಿಲೋಕ ಚಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಬಿ.ಬಿ.ಕಾವೇರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಕೋಲಾರ ಇನ್ನಷ್ಟು

TOP STORYಕೊನೆಗೂ ಕ್ಷಮೆಯಾಚಿಸಿದ ತಮಿಳು ನಟ ಸತ್ಯರಾಜ್ .

ಒಂಬತ್ತು ವರ್ಷಗಳ ಹಿಂದೆ ಕಾವೇರಿ...